"No man is born to any religion every man has a religion in his soul.
Let there be as many religions as there are human beings in the world."
Swami Vivekananda
Indian monk
ಮರ್ತ್ಯಜೀವನದ ತಾಟಸ್ಥ್ಯಮಂ ಕಡೆಕಡೆದು
ಶ್ರದ್ಧೆ ಸಂದೇಹಗಳನಿರದೆ ಹೊಡೆದೆಬ್ಬಿಸುವ,
ಮೇಣ್ ಜನತೆ ಜನತೆಯೊಳ್ ಪಕ್ಷಪಕ್ಷಂಗಳಂ
ಕೆರಳಿಸುವ ಶತಶತ ಮತಂಗಳುಂ ತಾಮಲ್ಲಿ
ರಾರಾಜಿಸಿದುವಗ್ನಿ ವರ್ಣದ ವೃಕಂಗಳೋಲ್,
ಜೋಲ್ವ ಜಿಹ್ವೆಯೊಳತಿ ಭಯಾನಕಂ-!
ಅಭಿಷೇಕ ವಿರಾಡ್ದರ್ಶನಂ – ೧೪೭-೧೫೨
ಶ್ರೀರಾಮಾಯಣ ದರ್ಶನಂ, ಶ್ರೀ ಸಂಪುಟಂ ಸಂ. ೧೩
ಪ್ರತಿಯೊಂದು ಮಗುವೂ ಹುಟ್ಟುತ್ತಲೆ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೆ ವಿದ್ಯೆಯ ಕರ್ತವ್ಯವಾಗಬೇಕು.
ಹುಟ್ಟುವಾಗ ‘ವಿಶ್ವಮಾನವ’ನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾಂಗ, ವರ್ಣ ಇತ್ಯಾದಿ ಉಪಾಧಿಗಳಿಂದ ಬದ್ದನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿಂದ ಪಾರಾಗಿ ಅವನನ್ನು ‘ಬುದ್ಧ’ನನ್ನಾಗಿ, ಅಂದರೆ ’ವಿಶ್ವಮಾನವ’ನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸಂಸ್ಕೃತಿ, ನಾಗರಿಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪಂಚದ ಮಕ್ಕಳೆಲ್ಲ ‘ಅನಿಕೇತನ’ರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ!
ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸಂಭವಿಸಿ ಹೋಗಿದ್ದಾರೆ. ಆವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊಂಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆಂಬ ಉದ್ದೇಶದಿಂದ ಹುಟ್ಟಿಕೊಂಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒಂದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊಂದು ಹೊಸ ಧರ್ಮಕ್ಕೆ ಎಡೆಗೊಟ್ಟುದೂ ಉಂಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗುಂಪುಗುಂಪಾಗಿ ಒಡೆದಿವೆ. ಯುದ್ದಗಳನ್ನು ಹೊತ್ತಿಸಿದ್ದಿವೆ, ಜಗತ್ತಿನ ಕ್ಷೋಭೆಗಳಿಗೆಲ್ಲ ಮೂಲಕಾರಣವೆಂಬಂತೆ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನುಮೇಲೆ ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿಂದೆ ಹೇಳಿದಂತೆ ‘ಮತ ಮತ್ತು ರಾಜಕೀಯ ಕಾಲ ಆಗಿಹೋಯಿತು. ಇನ್ನೇನಿದ್ದರೂ ಅಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.’
ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ. ಅಂದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; ಮನುಜ ಮತ. ಆ ಪಥ ಈ ಪಥ ಅಲ್ಲ; ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು. ಮಿತಮತದ ಆಂಶಿಕ ದೃಷ್ಟಿಯಲ್ಲ; ಭೌತಿಕ ಪಾರಮಾರ್ಥಿಕ ಎಂಬ ಭಿನ್ನದೃಷ್ಟಿಯಲ್ಲ; ಎಲ್ಲವನ್ನು ಭಗವದ್ ದೃಷ್ಟಿಯಿಂದ ಕಾಣುವ ಪೂರ್ಣದೃಷ್ಟಿ.
ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅಂತಹ ಭಾವನೆ ಅಂತಹ ದೃಷ್ಟಿ ಬರಿಯ ಯಾವುದೊ ಒಂದು ಜಾತಿಗೆ, ಮತಕ್ಕೆ, ಗುಂಪಿಗೆ, ಒಂದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗುಂಪುಗಾರಿಕೆಗೆಂದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತಂತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸಂಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾಧಕವಾಗುವುದೂ ಸಾಧ್ಯ. ಈ ‘ದರ್ಶನ’ವನ್ನೆ ‘ವಿಶ್ವಮಾನವ ಗೀತೆ’ ಸಾರುತ್ತದೆ.
· “ಮನುಷ್ಯಜಾತಿ ತಾನೊಂದೆ ವಲಂ” ಎಂಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.
· ವರ್ಣಾಶ್ರಮವನ್ನು ತಿದ್ದುವುದಲ್ಲ, ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಅಂದರೆ ಬ್ರಾಹ್ಮಣ, ಕ್ಷತ್ರಿಯ, ವ್ಯೆಶ್ಯ, ಶೂದ್ರ, ಅಂತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟಿಸ್ಟಂಟ್, ಸಿಕ್, ನಿರಂಕಾರಿ ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.
· ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ದತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು.
· ‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.
· ಮತ ‘ಮನುಜಮತ’ವಾಗಬೇಕು; ಪಥ ‘ವಿಶ್ವಪಥ’ವಾಗಬೇಕು; ಮನುಷ್ಯ ‘ವಿಶ್ವಮಾನವ’ನಾಗಬೇಕು.
· ಮತ ಗುಂಪುಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒಂದು ಮತಕ್ಕೂ ಸೇರದೆ, ಪ್ರತಿಯೊಬ್ಬನೂ ತಾನು ಕಂಡುಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅಂದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸಂಖ್ಯೆಯ ಮತಗಳಿರುವಂತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗುಂಪುಕಟ್ಟಿ ಜಗಳ ಹಚ್ಚುವಂತಾಗಬಾರದು.
· ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು.
ವಿಶ್ವಮಾನವಗೀತೆ – ಅನಿಕೇತನ
ಓ ನನ್ನ ಚೇತನ,
ಆಗು ನೀ ಅನಿಕೇತನ!
ರೂಪರೂಪಗಳನು ದಾಟಿ,
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವದೀಟಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ಎಲ್ಲಿಯೂ ನಿಲ್ಲದಿರು;
ಮನೆಯನೆಂದೂ ಕಟ್ಟದಿರು;
ಕೊನೆಯನೆಂದೂ ಮುಟ್ಟದಿರು;
ಓ ಅನಂತವಾಗಿರು!
ಓ ನನ್ನ ಚೇತನ,
ಆಗು ನೀ ಅನಿಕೇತನ!
ಅನಂತ ತಾನ್ ಅನಂತವಾಗಿ
ಆಗುತಿಹನೆ ನಿತ್ಯಯೋಗಿ;
ಅನಂತ ನೀ ಅನಂತವಾಗು;
ಆಗು, ಆಗು, ಆಗು, ಆಗು,
ಓ ನನ್ನ ಚೇತನ,
ಆಗು ನೀ ಅನಿಕೇತನ!